ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧಪೂಜೆ ನೆರವೇರಿಸಿದರು.
ನಾಳೆ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆಯುತ್ತಿರುವ ನಾಡಹಬ್ಬಕ್ಕೆ ತೆರೆ ಬೀಳಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಧ್ಯಾಹ್ನ 1.46 ರಿಂದ 2.08 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ.
ಸಂಜೆ 4.40 ರಿಂದ 5ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅರಮನೆ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಗಜರಾಜ ಅಭಿಮನ್ಯು ಹೊರಲಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.
ಬಳಿಕ, ಮೆರವಣಿಗೆ 5 ಕಿ.ಮೀ. ಸಾಗಿ ಬನ್ನಿಮಂಟಪ ತಲುಪಲಿದೆ. ಅಲ್ಲಿ ಸಂಜೆ 7.30ಕ್ಕೆ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಸಿಎಂ ಸೇರಿದಂತೆ ಸಂಪುಟದ ಹಲವು ಸದಸ್ಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರೊಂದಿಗೆ ಈ ಬಾರಿಯ ನಾಡಹಬ್ಬ ಮೈಸೂರು ದಸರೆಗೆ ತೆರೆ ಬೀಳಲಿದೆ.