ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ. 01ರಂದು 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಕಹಳೆ ನ್ಯೂಸ್
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1ರಂದು 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಮೇ. 01ರಂದು ಸಂಜೆ 6.45ಕ್ಕೆ ಗೋಧೋಳಿ ಲಗ್ನದಲ್ಲಿ ಸಾಮೂಹಿಕ ವಿವಾಹ ನಡೆಯಲಿದ್ದು, ಮದುವೆಯ ಎಲ್ಲ ವೆಚ್ಚವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದರಿಂದ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುತ್ತದೆ.
ಸಾಮೂಹಿಕ ವಿವಾಹದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಚಿಸುವವರು ಏ.20ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಾಪ್ ನಂ.9663464648, 8147263422