ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಲು ನಿರ್ಧರಿಸಿದೆ. ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಕುಮಾರಸ್ವಾಮಿ, 5 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಖರೀದಿಗೆ ಜಾಗತಿಕ ಟೆಂಡರ್ ಕರೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರಸ್ತುತ ರಾಜ್ಯದ ಯಾವುದೇ ವಿದ್ಯುತ್ ಸರಬರಾಜು ಕಂಪೆನಿಯೂ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿಲ್ಲ. ಮುಂದೆಯೂ ಲೋಡ್ ಶೆಡ್ಡಿಂಗ್ ಜಾರಿ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.