ಕಾಪು: ಕರಾವಳಿ ಭಾಗ ನಮ್ಮ ಹೃದಯವಿದ್ದಂತೆ. ಇಲ್ಲಿನ ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಿ ಉನ್ನತೀಕರಣಗೊಳಿಸುವುದು ಇಲಾಖೆಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಅವರು ಇಂದು ಕಾಪುವಿಗೆ ಭೇಟಿ ನೀಡಿದ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೀಡಿದ ಮನವಿ ಸ್ವೀಕರಿಸಿ ಮಾತನಾಡಿದರು. ರೈಲ್ವೆ ರಾಜ್ಯ ಖಾತೆಯ ಸ್ವತಂತ್ರ ಸಚಿವನಾಗಿ ಎರಡು ವಾರಗಳ ಹಿಂದೆ ಮಂಗಳೂರಿಗೆ ಬಂದು ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರ ಉಪಸ್ಥಿತಿಯಲ್ಲಿ ರೈಲ್ವೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ.
ಇಲ್ಲಿ ಬಂದ ಅಭಿಪ್ರಾಯವನ್ನು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೂ ವರದಿ ಮಾಡಿದ್ದೇವೆ. ಎಂಟು ದಿನಗಳಲ್ಲಿ ರೈಲ್ವೆ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿ ಅದಕ್ಕೆ ಸಂಬAಧಪಟ್ಟ ಸರ್ವೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ. ಸಂಸದರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಇಲ್ಲಿ ಯಾವ ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡಬಹುದು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ಚಂದ್ರ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.