
ಉಡುಪಿ: ಸಮಾಜದ ನ್ಯೂನತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಸಂತ ಸೇವಾಲಾಲ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾನತೆಯ ಬದುಕಿಗೆ ಹೆಚ್ಚು ಮಹತ್ವ ನೀಡಿ ಬಂಜಾರ ಸಮುದಾಯದ ಉನ್ನತಿಗಾಗಿ ಹೋರಾಡಿದ್ದ ಸಂತ ಸೇವಾಲಾಲರು ತಮ್ಮ ಸಮಾಜವನ್ನು ದಾರ್ಶನಿಕರಾಗಿ, ಸಂತರಾಗಿ, ಚಿಂತಕರಾಗಿ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ ಎಂದರು.
ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ಬಂಜಾರ ಸಮುದಾಯದವರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಅವರು ಏಳಿಗೆ ಹೊಂದುವಲ್ಲಿ ಸೇವಾಲಾಲರ ಕೊಡುಗೆ ಅಪಾರವಾಗಿದೆ ಎಂದರು.
ಕೃಷ್ಣ ನಗರಿ ಸಂತ ಶ್ರೀಸೇವಾಲಾಲ್ ಬಂಜಾರ ಸಂಘದ ಅಧ್ಯಕ್ಷ ಕುಮಾರ್ ಕೆ.ಎಂ ಮಾತನಾಡಿದರು.
ಕಾಪುವಿನ ಕಳತ್ತೂರು ಪಿ.ಕೆ.ಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗಂಗಾ ನಾಯ್ಕ್ ಎಲ್., ಸಂತ ಸೇವಾಲಾಲ ಹಾಗೂ ಬಂಜಾರ ಸಮುದಾಯದ ಆಚಾರ-ವಿಚಾರಗಳ ಕುರಿತು ಉಪನ್ಯಾಸ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಲಮಾಣಿ ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು.