
ಮಂಗಳೂರು:ಇತ್ತೀಚೆಗೆ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಗೆ ಭಾಜನರಾದ ಉದಯವಾಣಿ ದಿನಪತ್ರಿಕೆಯ ಛಾಯಾಗ್ರಾಹಕರಾದ ಶ್ರೀ ಸತೀಶ್ ಇರಾ ಹಾಗೂ ವಿಶೇಷ ಚೇತನರ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಬಜಾಲ್ ಜಲ್ಲಿಗುಡ್ಡೆ ನಿವಾಸಿ ಶ್ರೀ ಶ್ರಮಿತ್ ಎಂ ಅವರನ್ನು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಸನ್ಮಾನಿಸಲಾಯಿತು.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ಸತತ ಪರಿಶ್ರಮವೇ ಸಾಧಕರ ಮೂಲಮಂತ್ರ. ಶ್ರೇಷ್ಠ ಸಾಧಕರು ನಮ್ಮ ಸುತ್ತಮುತ್ತಲಿನಲ್ಲಿಯೂ ಇರುತ್ತಾರೆ. ಅಂತಹವರ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸಿದರೆ ಭವಿಷ್ಯದಲ್ಲಿ ಇನ್ನಷ್ಟು ಸಾಧಕರಿಗೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ. ಇಂದು ಸನ್ಮಾನ ಸ್ವೀಕರಿಸಿದ ಸಾಧಕರು ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಯ ಶಿಖರವನ್ನೇರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಮಾಜಿ ಉಪಮೇಯರ್ ಭಾನುಮತಿ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ವಿಜಯ ಕುಮಾರ್ ಶೆಟ್ಟಿ, ನಿತಿನ್ ಕುಮಾರ್, ಸೇರಿದಂತೆ ಮಂಡಲದ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.