ನವದೆಹಲಿ: ರಾಜ್ಯಸಭೆಯಲ್ಲಿ ಇಂದು ಪ್ರತಿಧ್ವನಿಸಿದ ರಫೇಲ್ ಡೀಲ್ ಮತ್ತು ಕಾವೇರಿ ವಿವಾದದ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ರಫೇಲ್ ಡೀಲ್ ಹಗರಣವನ್ನು ಪ್ರಸ್ತಾಪಿಸಿದರು.
ಹಗರಣ ಕುರಿತಂತೆ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಹಗರಣ ಕುರಿತಂತೆ ಚರ್ಚೆ ಅವಕಾಶ ಮಾಡಿಕೊಡುವಂತೆ ಪಟ್ಟು ಹಿಡಿದರು.
ರಾಜ್ಯಸಭೆ ಸಭಾಪತಿಗಳಾದ ಉಪ ರಾಷ್ಟ್ರಪತಿಯೂ ಆದ ಎಂ.ವೆಂಕಯ್ಯ ನಾಯ್ಡು ಅವರು ಹಗರಣದ ವಿಚಾರ ನ್ಯಾಯಾಲಯದ ಮುಂದಿರುವುದರಿಂದ ಚರ್ಚೆಗೆ ಅವಕಾಶ ಕೊಡುವುದಿಲ್ಲ ಎಂದಾಗ ಕಾಂಗ್ರೆಸ್ ಸದಸ್ಯರು ಬಾವಿಗೆ ಬಂದು ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಬಾವಿಗೆ ಇಳಿದ ಎಐಎಡಿಎಂಕೆ ಮತ್ತು ಡಿಎಂಕೆ ಸದಸ್ಯರು ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಕಾವೇರಿ ನೀರು ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.
ರಫೇಲ್ ಡೀಲ್ ಮತ್ತು ಕಾವೇರಿ ನೀರು ಹಂಚಿಕೆ ವಿವಾದ ಕುರಿತಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ಮುಂದುವರೆದು ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಗಮನಿಸಿದ ವೆಂಕಯ್ಯ ನಾಯ್ಡು ಅವರು ಸಭೆಯನ್ನು ನಾಳೆಗೆ ಮುಂದೂಡಿದರು.
ಕಲಾಪ ಮುಂದೂಡಿಕೆಗೂ ಮುನ್ನ ವೆಂಕಯ್ಯ ನಾಯ್ಡು ಅವರು ವಿಶ್ವ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಪಿ.ವಿ.ಸಿಂಧು ಅವರಿಗೆ ಅಭಿನಂದನೆ ಸಲ್ಲಿಸಿದರು.