ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ.
ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಮುಂದೆ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.ಸಂಸದೀಯ ಕಾರ್ಯದರ್ಶಿಗಳ ನೇಮಕ ಮಾಡುವ ವಿಚಾರ ನನಗೆ ತಿಳಿಸಿರಲಿಲ್ಲ.
ಸಮ್ಮಿಶ್ರ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕ ಚರ್ಚೆಯಾಗಿರಲಿಲ್ಲ. ಸಮನ್ವಯ ಸಮಿತಿ ಸಭೆಯಲ್ಲೂ ಈ ವಿಚಾರ ಚರ್ಚೆಗೆ ಬಂದಿಲ್ಲ ಎಂದು ಕುಮಾರಸ್ವಾಮಿ, ತಮ್ಮ ತಂದೆ ದೇವೇಗೌಡರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಬಳಿ ೨೨ ಖಾತೆಗಳಿದ್ದು, ಮೊದಲ ಹಂತದಲ್ಲಿ ೧೫ ಮಂದಿಯನ್ನು ಸಂಪುಟಕ್ಕೆ ಸೇರಿಸಿದ್ರು. ಈಗ ಬಾಕಿಯಿರುವ ಸಚಿವ ಸ್ಥಾನ ಭರ್ತಿ ಮಾಡಿದ್ದಾರೆ.
ಅದ್ರೆ ಕಾಂಗ್ರೆಸ್‌ನವರು ತಮ್ಮ ಅನುಕೂಲಕ್ಕೆ ತಕ್ಕಂತೆ ಸಂಸದೀಯ ಕಾರ್ಯದರ್ಶಿಗಳ ನೇಮಕ ಮಾಡಿಕೊಂಡಿದ್ದಾರೆ. ಈ ವಿಚಾರ ನನಗೆ ಬೇಸರ ತರಿಸಿದೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ.ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳ ಒಪ್ಪಂದದ ಬಳಿಕವೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕಳೆದ ಶನಿವಾರ ಸಂಪುಟ ವಿಸ್ತರಣೆ ಎಂದು ಹೇಳಿ, ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ.
೯ ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕವಾಗಿದೆ. ಜೆಡಿಎಸ್‌ಗೆ ಸಂಸದೀಯ ಕಾರ್ಯದರ್ಶಿಗಳ ಹುದ್ದೆಯ ನೇಮಕ ಬೇಡವೇ? ಅವರಲ್ಲಿ ಏಳುವ ಭಿನ್ನಮತ, ಅಸಮಾಧಾನದ ಶಮನಕ್ಕೆ ನಮ್ಮನ್ನು ಗಣನೆಗೆ ತೆಗೆದುಕೊಳ್ಳದೇ ಈ ಕೆಲಸ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ದೆಹಲಿಗೆ ಹೋದ ಸಂದರ್ಭದಲ್ಲಿ ನಾನು ಇದನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರ ಬಳಿ ಪ್ರಶ್ನಿಸುತ್ತೇನೆ ಎಂದಿರುವ ಕುಮಾರಸ್ವಾಮಿ, ನಿಮಗೇನಾದ್ರೂ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಬಂದಿತ್ತಾ? ಎಂದು ದೇವೇಗೌಡರನ್ನು ಕೇಳಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ದೇವೇಗೌಡರು, ದೆಹಲಿ ಪ್ರವಾಸ ಹೋದಾಗ ನೇರವಾಗಿ ಈ ವಿಚಾರವನ್ನು ರಾಹುಲ್‌ಗಾಂಧಿ ಬಳಿ ಚರ್ಚೆ ಮಾಡಿ ಎಂದು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರಂತೆ.
ರಾಜ್ಯದ ಕಾಂಗ್ರೆಸ್ ನಾಯಕರ ಮಾತಿನ ಮೇರೆಗೆ ಸಂಸದೀಯ ಕಾರ್ಯದರ್ಶಿಗಳ ನೇಮಕವಾಗಿದೆ. ಈ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ರಾಹುಲ್‌ಗಾಂಧಿ ಅವರ ದಿಕ್ಕು ತಪ್ಪಿಸಿದ್ದಾರೆ. ಯಾವುದೇ ಹುದ್ದೆ ನೇಮಕವಾಗಬೇಕಾದ್ರೂ ಸಮನ್ವಯ ಸಮಿತಿಯಲ್ಲಿ ನಿರ್ಧಾರವಾಗಬೇಕು ಎಂದು ದೇವೇಗೌಡರು ಹೇಳಿದ್ದಾರೆ ಎನ್ನಲಾಗಿದೆ.
ಇಂದಿನಿಂದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವೇಳೆ ಹೆಚ್‌ಡಿಕೆ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಸಂಸದೀಯ ಕಾರ್ಯದರ್ಶಿಗಳ ನೇಮಕ ವಿಚಾರ ಚರ್ಚಿಸುವ ಸಾಧ್ಯತೆ ಇದೆ.