Tuesday, January 21, 2025
ಸುದ್ದಿ

ಜ. 31 ರಂದು ಸಿದ್ಧಗಂಗಾ ಕ್ಷೇತ್ರದಲ್ಲಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ – ಕಹಳೆ ನ್ಯೂಸ್

ನಡೆದಾಡುವ ದೇವರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪುಣ್ಯ ಸ್ಮರಣೆ ಯನ್ನು ಇದೇ 31 ರ ಬೆಳಿಗ್ಗೆ 10.30 ಕ್ಕೆ ಸಿದ್ಧಗಂಗಾ ಕ್ಷೇತ್ರದಲ್ಲಿ ನಡೆಸಲಾಗುವುದು ಎಂದು ಕಿರಿಯ ಶ್ರೀಗಳಾದ ಸಿದ್ಧಲಿಂಗ ಮಹಾಸ್ವಾಮಿಗಳು ತಿಳಿಸಿದ್ದಾರೆ.

ಶ್ರೀಗಳ ಪುಣ್ಯಸ್ಮರಣೆ ಸಮಾರಂಭವನ್ನು 11 ನೇ ದಿನದಂದು ಮಠದ ಆವರಣದಲ್ಲಿರುವ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಇನ್ನು ಈ ಸಂದರ್ಭದಲ್ಲಿ ಶ್ರೀಗಳ ಆರೋಗ್ಯದ ಕಾಳಜಿವಹಿಸಿದ ಎಲ್ಲರಿಗೂ ಧನ್ಯವಾದಗಳನ್ನ ತಿಳಿಸಿ  ಮುಂದಿನ ದಿನಗಳಲ್ಲಿ ಶ್ರೀಗಳು ಉಪಯೋಗಿಸುತ್ತಿದ್ದ ಪ್ರತಿಯೊಂದು ವಸ್ತುವನ್ನು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಸಿರಿಗೆರೆಯ ತರಳಬಾಳು ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮಿಗಳು, ಬೆಂಗಳೂರು ಆರ್ಟ್ ಆಫ್ ಲಿವಿಂಗ್‌ನ ಪೂಜ್ಯ ಶ್ರೀ ರವಿಶಂಕರ್ ಗುರೂಜಿ ಹಾಗೂ ಕನಕಪುರ ದೇಗುಲ ಮಠದ ಪೂಜ್ಯ ಶ್ರೀ ಮುಮ್ಮಡಿ ನಿರ್ವಾಣಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಪುಣ್ಯ ಸ್ಮರಣೆ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ರಕ್ಷಣಾ ಸಚಿವೆ ನಿರ್ಮಲ ಸೀತಾರಾಮ್, ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಸಂಸದ ಎಂ.ವೀರಪ್ಪ ಮೊಯ್ಲಿ, ಗೃಹ ಸಚಿವ ಎಂ.ಬಿ.ಪಾಟೀಲ್, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ವಿಧಾನಸಭಾ ಪರಿಷತ್ ಸದಸ್ಯ ವಿ.ಸೋಮಣ್ಣ ಸೇರಿದಂತೆ ಹಲವಾರು ರಾಜಕೀಯ ಮುಖಂಡರುಗಳು ನುಡಿ ನಮನ ಸಲ್ಲಿಸಲಿದ್ದಾರೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತಿಮ ದರ್ಶನ, ಅಂತ್ಯಕ್ರಿಯೆ, ಮತ್ತಿತರ ಎಲ್ಲಾ ಕಾರ್ಯಗಳನ್ನು ಸುಸೂತ್ರವಾಗಿ ನಡೆಸಲು ಹಗಲಿರುಳು ಶ್ರಮಿಸಿದ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆಗಳಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ, ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿ ಶ್ರೀಗಳ ದರ್ಶನಕ್ಕೆ ಅನುವು ಮಾಡಿಕೊಟ್ಟ ರೈಲ್ವೆ ಇಲಾಖೆ ಹಾಗೂ ಸಾರಿಗೆ ಇಲಾಖೆಗಳಿಗೂ ಧನ್ಯವಾದ ಅರ್ಪಿಸಿದರು.

ಜೊತೆಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಶ್ರಮಿಸಿದ ಚೆನ್ನೈನ ರೇಲಾ ಆಸ್ಪತ್ರೆ, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆ, ಸ್ಥಳೀಯ ಸಿದ್ಧಗಂಗಾ ಅಸ್ಪತ್ರೆಯ ವೈದ್ಯರ ತಂಡದ ಕಾರ್ಯವನ್ನು ಇದೇ ವೇಳೆ ಕಿರಿಯ ಶ್ರೀಗಳು ಶ್ಲಾಘಿಸಿದರು.