ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡ ಘಟನೆ ಮಂಗಳೂರು ನಗರದ ಹಳೇ ಬಂದರಿನ ಪೋರ್ಟ್ ರಸ್ತೆಯಲ್ಲಿ ಇಂದು ನಡೆದಿದೆ.
ನಗರದ ಬಂದರ್‌ನ ಅನ್ಸಾರಿ ಕ್ರಾಸ್ ರಸ್ತೆಯ ಅಬ್ದುಲ್ ರಹೀಂ ಅಲಿಯಾಸ್ ಗೂಡ್ಸ್ ರಹೀಂ ಅಲಿಯಾಸ್ ಕಂಡಿ ರಹೀಂ ಬಂಧಿತ ಆರೋಪಿ. ಆರೋಪಿಯು ಈ ಹಿಂದೆ ಹಲವು ಗಾಂಜಾ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತನಿಂದ ಸುಮಾರು 44,000 ರೂ. ಮೌಲ್ಯದ 1.100 ಕೆಜಿ ಗಾಂಜಾ, 2 ಮೊಬೈಲ್ ಫೋನ್ ಹಾಗೂ 2,250 ರೂ. ನಗದು ಸೇರಿ ಒಟ್ಟು 47,750 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.
ಈತ ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೆಟ್ ಮಾಡಿ, ಮಂಗಳೂರು ನಗರದ ಕಾಲೇಜು ಹಾಗೂ ವಿದ್ಯಾಸಂಸ್ಥೆಗಳ ಬಳಿಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈತನ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ, ಪಣಂಬೂರು, ಬರ್ಕೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ತಲಾ ಒಂದು ಪ್ರಕರಣ ಸೇರಿ ಒಟ್ಟು 11 ಪ್ರಕರಣ ದಾಖಲಾಗಿತ್ತು.
ಅಲ್ಲದೇ ಈತ ಗೂಂಡಾ ಕಾಯ್ದೆಯಡಿಯಲ್ಲಿ ಸುಮಾರು ಒಂದು ವರ್ಷ ನ್ಯಾಯಾಂಗ ಬಂಧನದಲ್ಲಿದ್ದ.ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.