ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಹಂತದಲ್ಲಿ ಕಾಂಗ್ರೆಸ್ ಭಿನ್ನಮತೀಯರ ಗುಂಪಿನಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದ ಕಲಬುರ್ಗಿಯ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜಿನಾಮೆ ನೀಡಿದ್ದಾರೆ.
ಶಾಸಕ ಸ್ಥಾನಕ್ಕೆ ಉಮೇಶ್ ಜಾಧವ್ ರಾಜಿನಾಮೆ ನೀಡಿದ್ದು, ಮೈತ್ರಿ ಸರ್ಕಾರದ ಭಿನ್ನಮತಕ್ಕೆ ಮೊದಲ ವಿಕೆಟ್ ಪತನವಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಮೂಲಗಳ ಪ್ರಕಾರ ಉಮೇಶ್ ಜಾಧವ್ ಅವರು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಹಿಂದೆ ನಡೆದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಉಮೇಶ್ ಜಾಧವ್ ಸರ್ಕಾರ ಮತ್ತು ಕಾಂಗ್ರೆಸ್ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದರು.
ಇದನ್ನೇ ಅಸ್ತ್ರವಾಗಿಸಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಖರ್ಗೆ ವಿರುದ್ಧ ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿಸುವ ಪ್ಲ್ಯಾನ್ ಮಾಡಿದ್ದು ಸ್ಥಳೀಯ ಮಟ್ಟದಲ್ಲಿ ಮಾತುಕತೆ ನಡೆಸಿದೆ.
ಈ ವಿಚಾರ ಹೈಕಮಾಂಡ್ ನಲ್ಲೂ ಚರ್ಚೆಯಾಗಿದೆ ಎನ್ನಲಾಗುತ್ತೀದೆ. ಇದೇ ಕಾರಣಕ್ಕೆ ಇಂದು ಉಮೇಶ್ ಜಾಧವ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.