ಬೆಂಗಳೂರು : ಲೋಕಸಭಾ ಚುನಾವಣೆ ಸೆಟ್ಟೇರುತ್ತಿದ್ದಂತೆ ಪಕ್ಷಗಳ ನಡುವಿನ ಗುದ್ದಾಟ ಹೆಚ್ಚಾಗಿದೆ, ಈ ನಡುವೆ ತಮ್ಮ ಪಕ್ಷ ತೊರೆದು ಇನ್ನೊಂದು ಪಕ್ಷ ಸೇರುವ ಭರಾಟೆಯು ಹೆಚ್ಚಿದೆ, ಇದೀಗ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಟಿ.ಸಾಂಗ್ಲಿಯಾನ ಅವರು ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ.
ಸೋಮವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಎಚ್.ಟಿ.ಸಾಂಗ್ಲಿಯಾನ ಅವರು ಬರೆದಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಅವರು ರಾಜೀನಾಮೆಯನ್ನು ನೀಡಿದ್ದಾರೆ.
ಕರ್ನಾಟಕದ ಪಕ್ಷದ ನಾಯಕರು, ಹೈಕಮಾಂಡ್ ನಾಯಕರು ಕ್ರೈಸ್ತ ಸಮುದಾಯದ ಹಿತ ಕಾಯಲು ವಿಫಲವಾಗಿದ್ದಾರೆ. ಆದ್ದರಿಂದ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎಚ್.ಟಿ.ಸಾಂಗ್ಲಿಯಾನ ಪತ್ರದಲ್ಲಿ ವಿವರಣೆ ನೀಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಎಚ್.ಟಿ.ಸಾಂಗ್ಲಿಯಾನ ಅವರು ಬೆಂಗಳೂರು ಉತ್ತರ ಅಥವ ಬೆಂಗಳೂರು ಕೇಂದ್ರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅವರು ಪಕ್ಷವನ್ನು ತೊರೆದಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ರಿಜ್ವಾನ್ ಅರ್ಷದ್, ಬೆಂಗಳೂರು ಉತ್ತರದಲ್ಲಿ ಕೃಷ್ಣ ಬೈರೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
2004ರ ಲೋಕಸಭಾ ಚುನಾವಣೆಯಲ್ಲಿ ಎಚ್.ಟಿ.ಸಾಂಗ್ಲಿಯಾನ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. 473502 ಮತಗಳನ್ನು ಪಡೆದು, ಕಾಂಗ್ರೆಸ್‍ನ ಪ್ರಭಾವಿ ನಾಯಕರಾಗಿದ್ದ ಸಿ.ಕೆ.ಜಾಫರ್ ಫರೀಫ್ ಅವರನ್ನು ಸೋಲಿಸಿದ್ದರು.
2009ರ ಚುನಾವಣೆ ಸಮಯದಲ್ಲಿ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಹೊಸದಾಗಿ ರಚನೆಗೊಂಡ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಚುನಾವಣೆಯಲ್ಲಿ 304944 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಅವರ ಎದುರಾಳಿ ಪಿ.ಸಿ.ಮೋಹನ್ 340162 ಮತಗಳನ್ನು ಪಡೆದು ಜಯಗಳಿಸಿದ್ದರು.
2014ರಲ್ಲಿ ಟಿಕೆಟ್ ಸಿಗಲಿಲ್ಲ 2014ರ ಲೋಕಸಭಾ ಚುನಾವಣೆಯಲ್ಲಿ ಎಚ್.ಟಿ.ಸಾಂಗ್ಲಿಯಾನ ಅವರಿಗೆ ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಯಾವುದೇ ಕ್ಷೇತ್ರದಲ್ಲಿಯೂ ಟಿಕೆಟ್ ಸಿಗಲಿಲ್ಲ. ಆದರೆ, ಅವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದರು. ಬಳಿಕ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. 2019ರ ಚುನಾವಣೆಯಲ್ಲಿಯೂ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಸಿಗಲಿಲ್ಲ.