ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ‘ಫನಿ’ ಚಂಡಮಾರುತದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಅಧಿಕಾರಿಗಳ ಜತೆ ಮಾತನಾಡಿರುವ ಮೋದಿ, ಫನಿ ಚಂಡಮಾರುತದಿಂದ ಉದ್ಭವಿಸಬಹುದಾದ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಿಗೆ ನೆರವು ಒದಗಿಸಬೇಕು ಎಂದು ತಿಳಿಸಿದ್ದಾರೆ.
ಚಂಡಮಾರುತದಿಂದ ತೊಂದರೆಗೆ ಒಳಗಾಗುವ ಸಾಧ್ಯತೆ ಇರುವ ರಾಜ್ಯಗಳ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಹೊಂದಿ ಅಗತ್ಯವಾದ ಸಹಾಯ ಮತ್ತು ಸಹಕಾರ ನೀಡುವಂತೆ ಅವರು ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಫನಿ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.