ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ‘ಫನಿ’ ಚಂಡಮಾರುತವು ಸಮುದ್ರ ಭಾಗದಲ್ಲಿಯೇ ತೀವ್ರತೆ ಹೆಚ್ಚಿಸಿಕೊಳ್ಳುತ್ತಿದ್ದು, ಉತ್ತರದ ಕಡೆಗೆ ಚಲಿಸುತ್ತಿದೆ. ಹೀಗಾಗಿ ರಾಜ್ಯದ ಮೇಲೆ ಫನಿ ಚಂಡಮಾರುತದಿಂದ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ. ಆದರೂ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದರು.
ಇನ್ನು ಫನಿ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವೆಡೆ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣ ಹೆಚ್ಚಾಗಿರುವುದರಿಂದ ಬಿಸಿಗಾಳಿ ಬೀಸಲಿದೆ. ಏ.30ರ ನಂತರ ಸ್ವಲ್ಪ ಕಡಿಮೆ ಆಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದರು.