ನವದೆಹಲಿ: ನೂತನವಾಗಿ ಆಯ್ಕೆಯಾದ ಲೋಕಸಭಾ ಕಾಂಗ್ರೆಸ್ ಸಂಸದರ ಮೊದಲ ಸಭೆಯಲ್ಲಿ ಸೋನಿಯಾ ಗಾಂಧಿಯವರು ಮತ್ತೊಮ್ಮೆ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ನಾಯಕಿರಾಗಿ ಆಯ್ಕೆಯಾಗಿದ್ದಾರೆ.
ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಅವರು ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ರನ್ನು 1.67 ಲಕ್ಷ ಮತಗಳಿಂದ ಸೋಲಿಸುವ ಮೂಲಕ ಜಯ ಸಾಧಿಸಿದ್ದರು.ಶನಿವಾರದಂದು ಸಂಸತ್ತಿನ ಕೇಂದ್ರ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಸಂಸತ್ ಸದಸ್ಯರು ಹಾಜರಿದ್ದರು. ಇದೇ ವೇಳೆ ರಾಜ್ಯಸಭೆ ಸದಸ್ಯರು ಕೂಡ ಉಪಸ್ಥಿತರಿದ್ದರು ಎಂದು ಹೇಳಲಾಗಿದೆ.
ಈಗ ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷದ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ” ಸೋನಿಯಾ ಗಾಂಧಿಯವರು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ನಾಯಕಿರಾಗಿ ಆಯ್ಕೆಯಾಗಿದ್ದಾರೆ. 12.13 ಕೋಟಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದ್ದಾರೆ” ಎಂದು ಟ್ವೀಟ್ ನಲ್ಲಿ ಬರೆದು ಕೊಂಡಿದ್ದಾರೆ.
ಸುದ್ದಿ ಮೂಲಗಳ ಪ್ರಕಾರ ಮುಂಬರುವ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಪಕ್ಷದ ಕಾರ್ಯನೀತಿಯ ವಿಚಾರವಾಗಿ ಚರ್ಚೆ ನಡೆಸಲಾಯಿತು.ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಆರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಗಳ ಬಗ್ಗೆ ಬಿಜೆಪಿ ಮೇಲೆ ಟೀಕಾ ಪ್ರಹಾರ ನಡೆಸಿತ್ತು.
2019 ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಜಸ್ಥಾನ್, ಗುಜರಾತ್, ಉತ್ತರಾಖಂಡ್, ಹಿಮಾಚಲ ಪ್ರದೇಶ ಮತ್ತು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲುವಲ್ಲಿ ವಿಫಲವಾಗಿದೆ.ಪಕ್ಷದ ಸೋಲಿನ ನೈತಿಕ ಜವಾಬ್ದಾರಿಯನ್ನು ತೆಗೆದುಕೊಂಡ ರಾಹುಲ್ ಕಳೆದ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದರು.