ಬೆಂಗಳೂರು : ಕರ್ನಾಟಕದ ರಾಜಕೀಯ ದೊಂಬರಾಟಕ್ಕೆ ತೆರೆ ಬೀಳುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಮತ್ತೊಂದು ಕಡೆ ಆಡಳಿತಯಂತ್ರ ಕುಸಿದು ಹೋಗಿದ್ದು, ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಈ ಸಂದರ್ಭದಲ್ಲಿಯೇ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರಕ್ಕೆ ಮಹತ್ವದ ಸೂಚನೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕಿತ್ತು. ಆದರೆ ಸರ್ಕಾರ ಯಾವುದೇ ಆಡಳಿತಾತ್ಮಕ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ರಾಜ್ಯಪಾಲರ ಸೂಚನೆಯಿಂದಾಗಿ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಯಾವುದೇ ಆಡಳಿತಾತ್ಮಕ ವಿಚಾರಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳುವಂತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್‍ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಎರಡೂ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ. 16 ಶಾಸಕರ ರಾಜೀನಾಮೆಯಿಂದಾಗಿ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹುಮತವನ್ನು ಕಳೆದುಕೊಂಡಿದೆ.
ಆದ್ದರಿಂದ, ಸರ್ಕಾರ ಯಾವುದೇ ಆಡಳಿತಾತ್ಮಕ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ರಾಜ್ಯಪಾಲರು ಸೂಚನೆ ಕೊಟ್ಟಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 21 ವಿಚಾರಗಳ ಕುರಿತು ಚರ್ಚೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ರಾಜ್ಯಪಾಲರು ನೀಡದ್ದ ಸೂಚನೆ ಹಿನ್ನೆಲೆ ಮುಖ್ಯಮಂತ್ರಿಗಳು ಯಾವುದೇ ಚರ್ಚೆ ನಡೆಸಲಿಲ್ಲ.