ಮಡಿಕೇರಿ: ಕೊಡಗಿನಲ್ಲಿ ಮಳೆಯ ತೀವ್ರತೆ ಸ್ವಲ್ಪಮಟ್ಟಿಗೆ ಇಳಿಮುಖವಾಗಿದೆ. ಮಡಿಕೇರಿಯಲ್ಲಿ ಆಗಾಗ ಬಿಡುವು ಪಡೆದುಕೊಂಡು ಸಾಧಾರಣ ಮಳೆ ಆಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿಂದೆಕ್ಕೆ ತೆಗೆದುಕೊಳ್ಳಲಾಗಿದೆ.
ಕೊಡಗಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ 877.99 ಮಿ.ಮೀ. ಮಳೆ ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೆ.35ರಷ್ಟು ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದುವರೆಗೂ ಎಲ್ಲಿಯೂ ಏನೂ ತೊಂದರೆ ಉಂಟಾಗಿಲ್ಲ.
ಮಳೆಗಾಲದಲ್ಲಿ ಸಂಪಾಜೆ ಘಾಟಿ ರಸ್ತೆ ಬಿರುಕು ಬಿಡುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರಕ್ಕಾಗಿ ಸಂಸದ ಪ್ರತಾಪ್ ಸಿಂಹ ಅವರು ಬುಧವಾರ ಹೆದ್ದಾರಿ ಖಾತೆಯ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಭಾರೀ ಮಳೆಯಿಂದಾಗಿ ಮಡಿಕೇರಿ-ಸಂಪಾಜೆ ಭಾಗದ ರಾಷ್ಟ್ರೀಯ ಹೆದ್ದಾರಿ ಮತ್ತೆ ಬಿರುಕು ಬಿಟ್ಟಿದೆ. ಅದನ್ನು ಸರಿಪಡಿಸಲು ಹಾಗೂ ರೀಟೈನಿಂಗ್ ವಾಲ್ ನಿರ್ಮಾಣಕ್ಕೆ ಮನವಿ ಮಾಡಿದಾಗ, ಕೂಡಲೇ ನಿಧಿ ಬಿಡುಗಡೆಗೆ ಸಚಿವರಾದ ನಿತಿನ್ ಗಡ್ಕರಿಯವರು ಆದೇಶ ನೀಡಿದರು ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪ್ರತಿಕ್ರಿಯಿಸಿ, ಎರಡು ತಿಂಗಳಿಂದ ಎಲ್ಲಾ ರೀತಿಯ ಪೂರ್ವ ಸಿದ್ಧತೆ ಮಾಡಿಕೊಂಡಿರುವುದರಿಂದ ತುರ್ತು ಸ್ಪಂದನೆ ಸಾಧ್ಯವಾಗಿದೆ. ಮಂಗಳೂರು ಮತ್ತು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಣ್ಣಪುಟ್ಟ ಮಳೆಗೂ ಗುಡ್ಡ ಕುಸಿಯುತ್ತಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಎಂಜಿನಿಯರ್ ಗಳು ಸೇರಿದಂತೆ 4 ಜೆಸಿಬಿ, ಟಿಪ್ಪರ್ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ.