ರಾಜ್ಯದಲ್ಲಿ ಬರ ನಿರ್ವಹಣೆಯಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ರಜೆ ಇಲ್ಲ – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಬರ ನಿರ್ವಹಣೆಯಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ಯಾವುದೇ ರಜೆಯನ್ನು ತೆಗೆದುಕೊಳ್ಳುವಂತಿಲ್ಲ. ಮತ್ತು ಶನಿವಾರ ಹಾಗೂ ಭಾನುವಾರವೂ ಕೂಡ ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.
ಕೇಂದ್ರ ಸರ್ಕಾರವು ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4 ಸಾವಿರ ರೂಪಾಯಿ ನೆರವಿನ ಯೋಜನೆ ಜಾರಿಗೆ ಇನ್ನೆರಡು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು.
ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಸುಮಾರು 8 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆ ನಡೆಸಿದರು.
ಬರ ಪರಿಸ್ಥಿತಿ ಗಂಭೀರವಾಗಿದ್ದು, ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದ್ದು, ನರೇಗಾ ಉದ್ಯೋಗ ಖಾತ್ರಿ ದುರುಪಯೋಗ ಮಾಡಿಕೊಳ್ಳದಂತೆ ಕ್ರಮಕೈಗೊಳ್ಳಿ ಎಂದು ಬಿಎಸ್‍ವೈ ಅಧಿಕಾರಿಗಳಿಗೆ ಹೇಳಿದ್ದಾರೆ.
ಕಾನೂನುಬಾಹಿರ ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಅದನ್ನು ತಪ್ಪಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಅನ್ನಭಾಗ್ಯದ ಅಕ್ಕಿ ಗೋಡಾನ್‍ಗಳಲ್ಲಿ ಕೊಳೆಯುತ್ತಿದೆ. ಅಕ್ಕಿ ಹಾಳಾದರೆ, ಸಂಬಂಧಪಟ್ಟ ಅಧಿಕಾರಿಯೇ ಹೊಣೆ ಹೊರಬೇಕು. ಉಗ್ರಾಣದಲ್ಲಿರುವ ಅಕ್ಕಿ ಬಗ್ಗೆ ಮಾಹಿತಿ ನೀಡಬೇಕು. ಬಡವರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಬರ ಹಿನ್ನೆಲೆ ತುರ್ತು ಪರಿಸ್ಥಿತಿ ಅವಧಿಯನ್ನು ಸೆಪ್ಟೆಂಬರ್ 30ರವರೆಗೂ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಜುಲೈ 31ರವರೆಗೆ ಇತ್ತು.
ಒಟ್ಟಿನಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ ಉನ್ನತ ಅಧಿಕಾರಿಗಳ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಿದ್ದಾರೆ.