ಬೆಂಗಳೂರು: ಇತ್ತೀಚೆಗಷ್ಟೇ ಭಾರೀ ಮಳೆ ಬಿದ್ದು ಭೂ ಕುಸಿತ ಹಾಗೂ ಪ್ರವಾಹ ಉಂಟಾಗಿದ್ದ ಕೊಡಗು ಹಾಗೂ ಕರಾವಳಿ ಭಾಗದಲ್ಲಿ ಇನ್ನು ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನಲ್ಲೂ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಈಗಲೂ ಮುಂದುವರೆದಿದೆ. ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಿದ್ದು, ಚದುರಿದಂತೆ ಸಾಧಾರಣ ಮಳೆಯಾಗಿದೆ. ಇಂದು ಮತ್ತು ನಾಳೆ ಕೊಡಗಿನಲ್ಲಿ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ. ಹಾಗೆಯೇ ಕರಾವಳಿ ಭಾಗದಲ್ಲಿ ಎರಡು ಮೂರು ದಿನಗಳ ಕಾಲ ಹೆಚ್ಚಿನ ಮಳೆ ಬೀಳುವ ಸಂಭವವಿದೆ.
ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದರೂ ಸಾಧಾರಣ ಮಳೆ ಮುಂದುವರೆಯಲಿದೆ. ಒಂದರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಇನ್ನೆರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.