ನವದೆಹಲಿ: ದೇಶದ 73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಯ ರಾಜ್ ಘಾಟ್‍ಗೆ ತೆರಳಿ ಭಾರತದ ಪಿತಾಮಹ ಮಹಾತ್ಮಾ ಗಾಂಧಿಯವರ ಸ್ಮರಣಾರ್ಥ ಗೌರವ ನಮನ ಸಲ್ಲಿಸಿದರು.
ಇದಕ್ಕೂ ಮುನ್ನ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು, ಜೈ ಹಿಂದ್ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ದೆಹಲಿಯಲ್ಲಿ ಹಲವು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಧಾನಿ ಮೋದಿ ದೆಹಲಿಯ ಕೆಂಪು ಕೋಟೆಯಿಂದ ದೇಶದ ಜನರನ್ನುದ್ದೇಶಿಸಿ ಮಾತನಾಡಿದರು.
ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.