ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ದೈಹಿಕ ಶಿಕ್ಷಣದ ಕುರಿತು ಮಾಹಿತಿ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪಠ್ಯದ ಜೊತೆಗೆ ದೈಹಿಕ ಶಿಕ್ಷಣದ ಅಗತ್ಯತೆ ಇದೆ. ಆದರೆ ಇದರಲ್ಲಿ ಭಾಗವಹಿಸುವವರ ಸಂಖ್ಯೆಯು ಕಡಿಮೆ ಇದ್ದು, ಇದನ್ನು ಹೆಚ್ಚಿಸುವ ಅಗತ್ಯ ಇದೆ. ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ದೇಹವು ಸದೃಢವಾಗಿರುತ್ತದೆ. ನಮ್ಮಲ್ಲಿರುವ ಹಿಂಜರಿಕೆಯನ್ನು ಬಿಟ್ಟು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕಾನೂನು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್‍ಕುಮಾರ್ ಎಂ. ಕೆ. ಕ್ರೀಡೆಯ ಮಹತ್ವದ ಕುರಿತು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಶ್ರೀಮತಿ ಅಕ್ಷತಾ ಎ. ಪಿ. ಮತ್ತು ಕ್ರೀಡಾ ಕಾರ್ಯದರ್ಶಿ ಕೌಶಿಕ್ ಕೆ. ಟಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸತತ ಮೂರು ವರ್ಷಗಳಿಂದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕಾಲೇಜಿನ ವಿದ್ಯಾರ್ಥಿನಿ ಸಂಧ್ಯಾ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.