ಮಂಗಳೂರು : ಪ್ಲಾಸ್ಟಿಕ್ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೇತೃತ್ವದಲ್ಲಿ, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 46 ದಿನಗಳ ಕಾಲ “ಸ್ವಚ್ಛ ತಾ ಹೀ ಸೇವಾ ಆಂದೋಲನ’ ಆಯೋಜಿಸಲು ತೀರ್ಮಾನಿಸಲಾಗಿದೆ.
ಪ್ಲಾಸ್ಟಿಕ್ ಮುಕ್ತ ಭಾರತವನ್ನು ರೂಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು 73ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಉಲ್ಲೇಖೀಸಿರುವಂತೆ ಯೋಜನೆ ಜಾರಿಗೂಳಿಸಲಾಗುತ್ತಿದೆ. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜನಶಕ್ತಿ ಮಂತ್ರಾಲಯ ಸೆ. 11ರಿಂದ ಅ. 27ರ ವರೆಗೆ ಸ್ವಚ್ಛತಾ ಹೀ ಸೇವೆ ಆಂದೋಲವನ್ನು ಹಮ್ಮಿಕೂಂಡಿದ್ದು, ಮುಖ್ಯವಾಗಿ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮದ ಕುರಿತಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದೆ.
ರಾಜ್ಯದ ಎಲ್ಲ ಜಿಲ್ಲೆ , ತಾಲೂಕು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಶ್ರಮದಾನ ಹಾಗೂ ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದು, ಸಂಗ್ರಹಿಸಿದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಮರುಬಳಕೆ ಮಾಡುವುದು ಮತ್ತು ಪರಿಣಾಮಕಾರಿಯಾಗಿ ವಿಲೇವಾರಿ ಮಾಡುವ ಚಟುವಟಿಕೆಯನ್ನು ಸೇರಿದಂತೆ ಜಾಗೃತಿ ಚಟುವಟಿಕೆಗಳು ನಡೆಯಲಿವೆ. ಸ್ವಸಹಾಯ ಸಂಘಗಳ ಮುಖೇನ, ಸಾರ್ವಜನಿಕರಿಗೆ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಬಗ್ಗೆ ಜಾಗೃತಿಗೆ ಯೋಜನೆ ರೂಪಿಸಲಾಗುತ್ತಿದೆ.