ಬೆಂಗಳೂರು, ಸೆ.19 : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಮಳೆ ಮುಂದುವರೆದಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ದೊರೆತಿದೆ. ಮಹಾರಾಷ್ಟ್ರದಲ್ಲಿ ಮಳೆಯ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇದು ಕರ್ನಾಟಕದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.
ಪುಣೆ, ರಾಯ್‍ಗಢ್, ಮುಂಬೈ ಮತ್ತು ಸತಾರದಲ್ಲಿಯೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೀಡ್, ಔರಂಗಬಾದ್, ಪಾಲ್ಗಾರ್, ಥಾಣೆ, ರತ್ನಗಿರಿ, ಸಿಂಧುದುರ್ಗ ಜಿಲ್ಲೆಯಲ್ಲೂ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಕೊಯ್ನಾ ಜಲಾಶಯದ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾದರೆ ಮತ್ತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಪ್ರವಾಹ ಭೀತಿ ಎದುರಾಗಲಿದೆ.