ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ; ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ? – ಕಹಳೆ ನ್ಯೂಸ್
ಬೆಂಗಳೂರು: ಉಪ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಮೈತ್ರಿ ಮುರಿದು ಸ್ವತಂತ್ರವಾಗಿ ಕಣಕ್ಕೆ ಇಳಿಯುತ್ತಿರುವ ಕಾಂಗ್ರೆಸ್ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ರಾಜ್ಯದ 15 ಕ್ಷೇತ್ರಗಳ ಚುನಾವಣೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ. ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಉಪಚುನಾವಣೆ ಕಣಕ್ಕೆ ಇಳಿಯಲಿದ್ದಾರೆ.
ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಿಂದ ಭೀಮಣ್ಣ ನಾಯಕ್, ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದಿಂದ ಬಿ.ಎಚ್.ಬನ್ನಿಕೋಡ, ರಾಣೆಬೆನ್ನೂರು ಕ್ಷೇತ್ರದಿಂದ ಕೆ.ಬಿ.ಕೋಳಿವಾಡ ಹಾಗೂ ಚಿಕ್ಕಬಳ್ಳಾಪುರದಿಂದ ಎಂ.ಆಂಜನಪ್ಪ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.
ಉಳಿದಂತೆ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದಿಂದ ಎಂ.ನಾರಾಯಣಸ್ವಾಮಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ಎಂ.ಶಿವರಾಜ್, ಹೊಸಕೋಟೆಯಿಂದ ಪದ್ಮಾವತಿ ಸುರೇಶ್ ಹಾಗೂ ಮೈಸೂರು ಜಿಲ್ಲೆ ಹುಣಸೂರು ಕ್ಷೇತ್ರದಿಂದ ಎಚ್.ಪಿ.ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಉಳಿದ 7 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿವೆ.
ಉಪ ಚುನಾವಣೆ ಅಧಿಸೂಚನೆಯು ನವೆಂಬರ್ 11ರಂದು ಪ್ರಕಟವಾಗಲಿದ್ದು, ನವೆಂಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನವೆಂಬರ್ 19 ನಾಮಪತ್ರಗಳ ಪರಿಶೀಲನೆ, ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿರುತ್ತದೆ. ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.