ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ 6 ರಿಂದ 8 ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಕೇವಲ ಎರಡು ಗಂಟೆ ಮಾತ್ರ ಕರ್ಫ್ಯೂ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ.
ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿ ಜನ ಅಗತ್ಯ ವಸ್ತುಗಳ ಖರೀದಿಗೆ ಹೆಚ್ಚಿನ ಜನ ಮುಗಿಬಿದ್ದಿದ್ದಾರೆ. 8 ಗಂಟೆಗೆ ಕರ್ಫ್ಯೂ ಸಡಿಲಿಕೆ ಸಮಯ ಮುಕ್ತಾಯವಾದ ಹಿನ್ನೆಲೆಯಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಜನರನ್ನು ಚದುರಿಸಿದ್ದಾರೆ.
ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದರಿಂದ ಅಗತ್ಯವಾದಷ್ಟು ವಸ್ತು ಸಿಕ್ಕಿಲ್ಲವೆನ್ನಲಾಗಿದೆ. ಸಮಯ ಮುಗಿಯುತ್ತಿದ್ದಂತೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದ್ದಾರೆ. ಅಂಗಡಿ ಮುಂಗಟ್ಟು ಬಂದ್ ಮಾಡಿಸಿದ್ದಾರೆನ್ನಲಾಗಿದೆ. ಪೊಲೀಸರ ಸೂಚನೆ ಹಿನ್ನಲೆಯಲ್ಲಿ ಜನರೆಲ್ಲಾ ತೆರಳಿದ್ದು, ಕರ್ಫ್ಯೂ ಮುಂದುವರೆಸಲಾಗಿದೆ. ಮತ್ತೆ ಮಂಗಳೂರು ರಸ್ತೆಗಳು ಬಿಕೋ ಎನ್ನುತ್ತಿವೆ. ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.