Recent Posts

Monday, January 20, 2025
ಹೆಚ್ಚಿನ ಸುದ್ದಿ

ಲಾಕ್‍ಡೌನ್ ಸಂದರ್ಭದಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ : ಸಿಎಂ ಬಿಎಸ್‍ವೈ-ಕಹಳೆನ್ಯೂಸ್

ಬೆಂಗಳೂರು,ಅ.21- ರಾಜ್ಯದಲ್ಲಿ ಕಳೆದ ಆರು ತಿಂಗಳಿನಿಂದ ಮಹಾಮಾರಿ ಕೋವಿಡ್-19 ಸೋಂಕು ನಿಯಂತ್ರಿಸುವಲ್ಲಿ ಮತ್ತು ಲಾಕ್‍ಡೌನ್ ನಿಯಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಿಸುವಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಇಂದು ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಉತ್ತರಕರ್ನಾಟಕದ ಭಾಗದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅಭಯ ನೀಡಿದರು.


ಈಗಾಗಲೇ ಅಧಿಕಾರಿಗಳ ಜೊತೆ ನೆರೆಯಿಂದ ಉಂಟಾಗಿರುವ ನಷ್ಟದ ಕುರಿತು ಮಾಹಿತಿ ಪಡೆದಿದ್ದೇನೆ. ಸಂತ್ರಸ್ತರಿಗೆ ತೊಂದರೆಯಾಗದ ರೀತಿಯಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇಂದು ಉತ್ತರ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದು, ಅಧಿಕಾರಿಗಳಿಂದ ಎಷ್ಟು ಪ್ರಮಾಣದ ನಷ್ಟ ಉಂಟಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲಾಗುವುದು. ಅಲ್ಲದೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವರದಿಯನ್ನು ಸಲ್ಲಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲು ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ವೈಮಾನಿಕ ಸಮೀಕ್ಷೆ ಮುಗಿದ ಬಳಿಕ ಬೆಂಗಳೂರಿಗೆ ಬಂದು ಅಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಹೆಚ್ಚಿನ ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದರು. ನಾನು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಅಧಿಕಾರಿಗಳು ವೈಮಾನಿಕ ಸಮೀಕ್ಷೆ ನಡೆಸಿ ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಒಂದೆರಡು ದಿನಗಳಲ್ಲಿ ಪರಿಹಾರದ ಮೊತ್ತವನ್ನು ಘೋಷಣೆ ಮಾಡುವುದಾಗಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೂ ಮುನ್ನ ಬೆಂಗಳೂರಿನ ನಗರ ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಸಿಎಂ ಯಡಿಯೂರಪ್ಪ ಗೌರವ ಸೂಚಿಸಿದರು. ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟವರ ಗೌರವ ಸ್ಮರಣಾರ್ಥ ಪ್ರತಿ ವರ್ಷ ಅಕ್ಟೋಬರ್ 21ರಂದು ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇತ್ತೀಚೆಗೆ ಕೋವಿಡ್ 19 ಹೋರಾಟದಲ್ಲಿ ಹಾಗೂ ಇನ್ನಿತರೆ ಕರ್ತವ್ಯ ನಿರ್ವಹಣೆ ವೇಳೆ ಮೃತಪಟ್ಟವರಿಗೆ ಸಿಎಂ ಗೌರವ ಸೂಚಿಸಿದರು.

ಭಾರತ-ಚೀನಾ ಗಡಿ ಲಡಾಕ್‍ನಲ್ಲಿ ಸೈನಿಕರನ್ನು ಹತ್ಯೆಗೈದಿದ್ದು, ದೇಶಾದ್ಯಂತ ಒಟ್ಟು 264 ಮಂದಿ ಕರ್ತವ್ಯದ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದರು. ಕರ್ತವ್ಯ ನಿರ್ವಹಣಾ ಸಂದರ್ಭದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಗೌರವ ವಂದನೆ ಸೂಚಿಸುವುದು ಶಿಷ್ಟಾಚಾರವಾಗಿದೆ.

ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರರಾಜ್ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.