ನಾಳೆಯಿಂದ ಶಾಲೆಗಳು ಪುನಾರಾರಂಭವಾಗುವ ಕಾರಣ ಮಕ್ಕಳ ಸುರಕ್ಷತೆಗೆ ಸಂಬಂಧಿಸಿ ಅಗತ್ಯ ಕ್ರಮಕೈಗೊಳ್ಳಲಾಗಿದೆ; ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ – ಕಹಳೆ ನ್ಯೂಸ್
ಮಂಗಳೂರು :ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಾಳೆಯಿಂದ ಶಾಲೆಗಳ ಪುನರಾಂಭವಾಗುವ ಕಾರಣ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಹಾಗೂ ಪ್ರೌಢ ಶಾಲೆಗಳಲ್ಲಿ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹಾಗೆಯೇ ಪ್ರತೀ ಶಾಲೆಯಲ್ಲಿ ದೈಹಿಕ ಉಷ್ಣಾಂಶ ಪರೀಕ್ಷೆ ನಡೆಸಲು ಥರ್ಮಲ್ ಸ್ಕ್ಯಾನರ್ ಉಪಕರಣ ವ್ಯವಸ್ಥೆ ಮಾಡಲಾಗಿದ್ದು, ಶಾಲೆಗಳಲ್ಲಿ ಎಲ್ಲಾ ಶಿಕ್ಷಕರು ಹಾಗೂ ಭೋಧಕೇತರ ಶಾಲಾ ಸಿಬ್ಬಂದಿಗಳಿಗೆ ಆರ್.ಟಿ.ಪಿ.ಸಿಆರ್ ಕೊರೊನಾ ಪರೀಕ್ಷೆ ಕಡ್ಡಾಯವಾಗಿದ್ದು ಈಗಾಗಲೇ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಶಾಲಾ ಆವರಣ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್, ನಗರ ಪ್ರದೇಶದ ಶಾಲೆಗಳಲ್ಲಿ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್ ವತಿಯಿಂದ ಸ್ಯಾನಿಟೈಸ್ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ ಎಂದಿದ್ದಾರೆ. ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಆದರೆ ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲಾ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು. ಶಿಕ್ಷಣ ಇಲಾಖೆಯ ಎಲ್ಲಾ ಉಸ್ತುವಾರಿ ಅಧಿಕಾರಿಗಳು ಜನವರಿ 1 ರಿಂದ 8 ರವರೆಗೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಲು ಸೂಚಿಸಲಾಗಿದೆ. ಕೊರೊನಾ ಮಾರ್ಗಸೂಚಿಯಂತೆ ಹಾಗೂ ಇಲಾಖೆಯು ನೀಡಿರುವ ಎಸ್.ಓ.ಪಿ.ಯಂತೆ ಕಾರ್ಯನಿರ್ವಹಿಸಬೇಕು. ಉಲ್ಲಂಘನೆಯಾದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಇರುವುದಿಲ್ಲ, ಆದುದರಿಂದ ಮಕ್ಕಳು ಬಿಸಿ ನೀರು ಹಾಗೂ ಉಪಹಾರದ ವ್ಯವಸ್ಥೆಯನ್ನು ತಮ್ಮ ಮನೆಯಿಂದ ತರಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಮುಖ್ಯೋಪಾಧ್ಯಾಯರು ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿಗಳನ್ನು ನಡೆಸಬೇಕು, ಶಾಲೆಗಳಲ್ಲಿ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದಿದ್ದಾರೆ. ಎಲ್ಲಾ 7 ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಶಾಲಾ ಮುಖ್ಯೋಪಾಧ್ಯಾಯರುಗಳು ಹಾಗೂ ಆಡಳಿತ ಮಂಡಳಿಗಳ ಮುಖ್ಯಸ್ಥರ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಲಾಗಿರುತ್ತದೆ. ಹಾಸ್ಟೆಲ್ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಅಗತ್ಯ ಕ್ರಮ ವಹಿಸಲು ಮೇಲ್ವಿಚಾರಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗಿದ್ದು ಪೋಷಕರು ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.