ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮೂರು ಕ್ಷೇತ್ರಗಳಿಗೂ ಮುಂದಿನ ತಿಂಗಳು ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಮತ ಏಣಿಕೆ ಮೇ 2ರಂದು ನಡೆಯಲಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ. ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ಇನ್ನು ಉಪಚುನಾವಣೆ ಘೋಷಣೆಯಾಗಿಲ್ಲ. ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ, ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಕ್ಷೇತ್ರದ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರ. ಮಾರ್ಚ್ 23ರಂದು ಉಪ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 3 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಚುನಾವಣೆ ಘೋಷಣೆ ಆದ ದಿನದಿಂದಲೇ ಮಾದರಿ ನೀತಿಸಂಹಿತೆ ಜಾರಿಯಲ್ಲಿರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ತಮಿಳುನಾಡು, ಅಸ್ಸಾಂ, ಕೇರಳ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೂ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.