ಬೆಂಗಳೂರು (ಏ. 17): ಆಗ್ನೇಯ ಹಾಗೂ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ದಟ್ಟಮೋಡಗಳಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ ಬೀಳಲಿದೆ.
ಭಾರತೀಯ ಹವಾಮಾನ ಇಲಾಖೆ ಈ ಬಾರಿ ದೇಶದಲ್ಲಿ ಶೇ.97ರಷ್ಟುಮುಂಗಾರು ಮಳೆಯಾಗಲಿದೆ ಎಂದು ಹೇಳಿದೆ. ರಾಜ್ಯಗಳ ವಿಚಾರದಲ್ಲಿ ಈಗಲೇ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಅಷ್ಟಾಗಿ ಮಳೆಯಾಗಲಿಲ್ಲ. ಆದರೆ, ಆಗಸ್ಟ್‌ನಿಂದ ಅಕ್ಟೋಬರ್‌ವರೆಗೆ ಉತ್ತಮ ಮಳೆ ಬಿದ್ದಿತ್ತು. ಈ ಬಾರಿ ಮೇ ಮತ್ತು ಜೂನ್ ತಿಂಗಳಲ್ಲಿ ವಾಡಿಕೆಯಷ್ಟುಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
ರಾಜಧಾನಿಯಲ್ಲಿ ಮಳೆ ಆರ್ಭಟ:
ಸೋಮವಾರ ರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿತ್ತು. ಗುಡುಗು, ಗಾಳಿ ಸಹಿತ ಸುರಿದ ಭಾರಿ ಮಳೆಗೆ ನಗರದಲ್ಲಿ ಸುಮಾರು 10ಕ್ಕೂ ಹೆಚ್ಚು ಮರಗಳು ಧರೆಗುರುಳಿದವು. ಕೆಲ ಕಡೆ ಮರದ ಕೊಂಬೆಗಳು ಬಿದ್ದಿದ್ದರಿಂದ ಕೆಲ ಕಾರು, ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ದಿಢೀರ್ ಮಳೆ ಸುರಿದಿದ್ದರಿಂದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು.