ಮೈಸೂರು: ಚುನಾವಣಾ ರಣಾಂಗಣವಾಗಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹುರಿಯಾಳುಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ನಾಮಪತ್ರ ಸಲ್ಲಿಸುತ್ತಿದ್ದು, ಭರ್ಜರಿ ಬಲ ಪ್ರದರ್ಶನ ಮಾಡಿದ್ದಾರೆ.
ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಏಕಕಾಲದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್‌ನ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಚಾರ್ಜ್ ನಡೆಸಿದರು.
ಮೊದಲು ಸಿದ್ದರಾಮಯ್ಯ ಅವರು ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಆದರೆ ಅವರು ಆಗಮಿಸುವುದು ತಡವಾದ ಕಾರಣ ಮೆರವಣಿಗೆ ಅವಕಾಶ ನೀಡಲಿಲ್ಲ. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು.ಎರಡೂ ಕಡೆಯ ಕಾರ್ಯಕರ್ತರ ತೀವ್ರ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಿ ಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಪುತ್ರ ಯತೀಂದ್ರ ರೊಂದಿಗೆ ಸಿದ್ದರಾಮಯ್ಯನ ಹುಂಡಿಯಲ್ಲಿ ಪೂಜೆ ಸಲ್ಲಿಸಿ ಬಳಿಕ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕೋಟೆ ಆಂಜೆನೆಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸುತ್ತಿದ್ದಾರೆ.