ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 6 ಮತ್ತು 7ರಂದು ರಾಜ್ಯಾದ್ಯಂತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವಾಗ, ಎಲ್ಲಿ ಸುರಿಯುತ್ತೆ ಮಳೆ?
ಜೂನ್ 6ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 7ರಂದು ಉತ್ತರ ಒಳನಾಡಿನ ಪ್ರದೇಶಗಳಾದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಪ್ರದೇಶಗಳಾದ ಬಳ್ಳಾರಿ, ಚಿಕ್ಕಮಗಳೂರು, ಹಾಸನ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲಭಾಗಗಳು, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚುರುಕಾಗಲಿದೆ ಮುಂಗಾರು: ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಭಾಗದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದೆ. ಸಂಜೆ ವೇಳೆ ಬೆಂಗಳೂರಿನಲ್ಲಿ ಬಿರುಸಿನ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.