Wednesday, January 22, 2025
ರಾಜಕೀಯರಾಜ್ಯಸುದ್ದಿ

ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ: ಓರ್ವ ಆರೋಪಿ ಪೊಲೀಸ್ ವಶಕ್ಕೆ,ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ – ಕಹಳೆ ನ್ಯೂಸ್

ಶಿವಮೊಗ್ಗ, ಫೆ 21 : ಹಿಜಾಬ್ ವಿವಾದದಿಂದ ಸುದ್ದಿಯಾಗಿದ್ದ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ಇನ್ನು ಈ ಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿ ನಡೆದಿರುವುದರಿಂದ ತೀವ್ರ ಚರ್ಚೆಗೆ ಗ್ರಾಸವಾಗಿದೆ.


ಇನ್ನು ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದ್ದು, ಈ ಘಟನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಈಗಾಗಲೇ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದ್ದು, ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಈ ಘಟನೆಯಿಂದ ಸಿಟ್ಟಿಗೆದ್ದ ಜನರು ಕಲ್ಲು ತೂರಾಟ ಕೂಡ ನಡೆಸಿ, ಮೋಟರ್‌ ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್​ಪಿ ಲಕ್ಷ್ಮಿಪ್ರಸಾದ್ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಇನ್ನು ಇಂದು ಬೆಳಗ್ಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಪಿಗಳ ಸುಳಿವು ಸಿಕ್ಕಿದ್ದು, ಸದ್ಯದಲ್ಲಿಯೇ ಬಂಧಿಸಲಾಗುವುದು. ಯುವಕನ ಕುಟುಂಬಸ್ಥರಿಗೆ ಆತನನ್ನು ಜೀವಂತವಾಗಿ ತರಲು ಸಾಧ್ಯವಿಲ್ಲ. ಆದರೆ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಒಟ್ಟು 4ರಿಂದ 5 ಆರೋಪಿಗಳು ಇರಬಹುದು ಎಂಬ ಮಾಹಿತಿಯಿದ್ದು ಇನ್ನಷ್ಟೇ ಖಚಿತವಾಗಬೇಕಿದೆ. ಶಿವಮೊಗ್ಗದಲ್ಲಿ ಇಂತಹ ದುರದೃಷ್ಟಕರ ಘಟನೆಯಾಗಿರುವುದನ್ನು ಖಂಡಿಸುತ್ತೇನೆ. ಈ ಪ್ರಕರಣದಲ್ಲಿ ಸ್ಪಷ್ಟವಾದ ಸಂದೇಶವನ್ನು ಸರ್ಕಾರ, ಪೊಲೀಸ್ ಇಲಾಖೆ ನೀಡಲಿದೆ, ಅಲ್ಲಿಯವರೆಗೂ ಯಾರು ಜಿಲ್ಲೆಯಲ್ಲಿ ಜನರು ಶಾಂತರೀತಿಯಲ್ಲಿ ವರ್ತಿಸುವಂತೆ ಮನವಿ ಮಾಡಿದರು.

ಇನ್ನು ಪ್ರಕರಣದ ಬೆನ್ನತ್ತಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಈತನ ಬಂಧನ ಮೂಲಕ ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ, ಕೊಲೆಗೂ ಹಿಜಾಬ್ ವಿವಾದಕ್ಕೂ ಏನಾದರೂ ಸಂಬಂಧ ಇದೆಯೇ ಹೀಗೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ.