ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಮಾಹಿತಿ ಕಾರ್ಯಾಗಾರ : ಡ್ರಗ್ಸ್ ಸೇವನೆ ಮನುಷ್ಯನನ್ನು ವಿನಾಶ ಮತ್ತು ಕತ್ತಲೆಯ ಕೂಪಕ್ಕೆ ತಳ್ಳುತ್ತದೆ-ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ- ಕಹಳೆ ನ್ಯೂಸ್
ಪುತ್ತೂರು: ಡ್ರಗ್ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕ ವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದು ಪುತ್ತೂರು ನರಿಮೊಗರಿನ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು.
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪುತ್ತೂರು ರೆಡ್ ಕ್ರಾಸ್ ಸೊಸೈಟಿಯ ಸಹಯೋಗದೊಂದಿಗೆ ಆಯೋಜಿಸಲಾದ ಅಂತಾರಾಷ್ಟ್ರೀಯ ಡ್ರಗ್ಸ್ ಮತ್ತು ಮಾದಕ ವಸ್ತು ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ವಿಶ್ವದಾದ್ಯಂತ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನು ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಮಾದಕ ವಸ್ತು ಮನುಷ್ಯನನ್ನು ಕತ್ತಲೆಯ ಕೂಪಕ್ಕೆ ತಳ್ಳಿ ಸಂಪೂರ್ಣ ನಾಶ ಮಾಡುತ್ತದೆ. ಯುವ ಸಮುದಾಯವನ್ನು ಮಾದಕ ವಸ್ತುಗಳ ಸೇವನೆ ಮತ್ತು ಬಳಕೆಯಿಂದ ದೂರವಿಡಲು ಹಾಗೂ ಆರೋಗ್ಯಕರ ಅಭ್ಯಾಸಗಳನ್ನು ಉತ್ತೇಜಿಸಲು, ಜನರಲ್ಲಿ ಜಾಗೃತಿ, ಅರಿವು ಕಾಳಜಿ ಮೂಡಿಸಬೇಕು. ನಮ್ಮ ದೇಶವನ್ನು ಮಾದಕ ವಸ್ತು ಬಳಕೆ ಮತ್ತು ಸೇವನೆಯಿಂದ ಸಂಪೂರ್ಣವಾಗಿ ಮುಕ್ತಗೊಳಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ ಮತ್ತು ಡ್ರಗ್ಸ್ ಮುಕ್ತ ಭಾರತದ ನಮ್ಮ ದೃಷ್ಟಿಯನ್ನು ಅರಿತುಕೊಳ್ಳೋಣ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರು ರೆಡ್ ಕ್ರಾಸ್ ಸೊಸೈಟಿಯ ಸಂಚಾಲಕ ಆಸ್ಕರ್ ಆನಂದ್ ಮಾತನಾಡಿ ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಮ್ಮ ಸಮಾಜದಿಂದ ಇಂತಹ ಮಾದಕ ದ್ರವ್ಯಗಳ ಭೀತಿಯನ್ನು ತೊಡೆದುಹಾಕಲು ತಳಮಟ್ಟದಲ್ಲಿ ಕೆಲಸ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸೊಸೈಟಿಯ ಕೋಶಾಧಿಕಾರಿ ಅಬ್ದುಲ್ ರಹಿಮಾನ್, ಕಾರ್ಯಕ್ರಮ ಉಪಸಮಿತಿಯ ಅಧ್ಯಕ್ಷ ಪ್ಯಾಟ್ರಿಕ್ಸ್ ಸಿಪ್ರಿಯನ್ ಮಸ್ಕರೇನಸ್, ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕ ದೇವಿಪ್ರಸಾದ್ ಸ್ವಾಗತಿಸಿ ವಿದ್ಯಾರ್ಥಿ ಆದಿತ್ಯ ನಾರಾಯಣ ವಂದಿಸಿದರು. ವಿದ್ಯಾರ್ಥಿನಿ ನಿಶ್ಚಿತ ಕಾರ್ಯಕ್ರಮವನ್ನು ನಿರೂಪಿಸಿದರು