ಇನ್ಮುಂದೆ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ- ಕಹಳೆ ನ್ಯೂಸ್
ಬೆಂಗಳೂರು: ಇನ್ನುಮುಂದೆ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಪರವಾಗಿ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಆದೇಶ ಪ್ರತಿಯಲ್ಲಿ ಏನಿದೆ?: ರಾಜ್ಯಾದ್ಯಂತ ಎಲ್ಲ ಜಿಲ್ಲೆ, ತಾಲ್ಲೂಕು ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರವರ ಕೆಲಸ ಕಾರ್ಯಗಳ ನಿಮಿತ್ತ ಅಲ್ಲಿಗೆ ಆಗಮಿಸುವುದು ಸರ್ವೇ ಸಾಮಾನ್ಯ. ಆದರೆ ಕೆಲ ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಫೋಟೋ, ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ.
ಇದರಿಂದ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಹಾಗೂ ವೀಡಿಯೋ ತೆಗೆಯುವುದನ್ನು ನಿಷೇಧಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ.