ಬಿಜೆಪಿಗೆ ಬಾಯ್ ಬಾಯ್ ..!ಕಾಂಗ್ರೆಸ್ ಹಾಯ್ ಹಾಯ್..! ಹೈಕಮಾಂಡ್ ಬುಲಾವ್ ಜಿಲ್ಲಾ ಕಾಂಗ್ರೆಸ್ ಕಛೇರಿ ಸಭೆಯಲ್ಲಿ ಅಶೋಕ್ ಕುಮಾರ್ ರೈ..! ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ಫಿಕ್ಸ್..!? – ಕಹಳೆ ನ್ಯೂಸ್
ಪುತ್ತೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧೆ ಬಯಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿರುವ 14 ಮಂದಿಯ ಜತೆಗೆ ಕಾಂಗ್ರೆಸ್ ಪಕ್ಷದ ನಾಯಕರು ದ.26 ರಂದು ಮಂಗಳೂರಿನಲ್ಲಿರುವ ಕಛೇರಿಯಲ್ಲಿ ಮಾತುಕತೆ ನಡೆಸಿದ್ದಾರೆ.
ಮಂಗಳೂರಿನಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪಕ್ಷದ ನಾಯಕರಾದ ರಾಜ್ಯಸಭೆಯ ಮಾಜಿ ಉಪಸಭಾಪತಿಗಳೂ, ಚುನಾವಣಾ ಉಸ್ತುವಾರಿಯೂ ಆಗಿರುವ ರೆಹಮಾನ್ ಖಾನ್, ಕೆಪಿಸಿಸಿ ಉಪಾಧ್ಯಕ್ಷರೂ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಗಳೂ ಆಗಿರುವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರೂ, ಚುನಾವಣಾ ಉಸ್ತುವಾರಿಗಳೂ ಆಗಿರುವ ಸಲೀಂ ಅಹಮ್ಮದ್ ಮತ್ತು ವಿಧಾನ ಪರಿಷತ್ ಸದಸ್ಯರೂ ಆಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿರುವವರ 14 ಮಂದಿಯೊಂದಿಗೆ ಮಾತುಕತೆ ನಡೆಸಿ ಅಭಿಪ್ರಾಯ ಆಲಿಸಿದರು. ಅಲ್ಲದೆ, ವಿವಿಧ ಮುಂಚೂಣಿ ಘಟಕಗಳ ಪ್ರಮುಖರ ಜತೆ ಚರ್ಚೆ ನಡೆಸಿದರು.
ಎಲ್ಲರ ಅಭಿಪ್ರಾಯ ಆಲಿಸಿದ ಬಳಿಕ ಪಕ್ಷದ ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿರುವ 14 ಮಂದಿಯ ಪೈಕಿ ಮೂವರ ಹೆಸರನ್ನು ಅಂತಿಮಗೊಳಿಸಿ ಕೆಪಿಸಿಸಿಗೆ ರವಾನಿಸಲಿದ್ದಾರೆ. ಸ್ಕ್ರೀನಿಂಗ್ ಕಮಿಟಿ ಮತ್ತು ಎಐಸಿಸಿ ನಾಯಕರು ಅಂತಿಮವಾಗಿ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಿದ್ದಾರೆ.
ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿ ಶುಲ್ಕದೊಂದಿಗೆ ಕೆಪಿಸಿಸಿಗೆ ಅರ್ಜಿ ಸಲ್ಲಿಸಿರುವ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಅಮರ್ ಆಳ್ವ, ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ವಕ್ತಾರ ಭರತ್ ಮುಂಡೋಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ಎನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮತ್ತು ಉದ್ಯಮಿ ಅಶೋಕ್ ಕುಮಾರ್ ರೈಯವರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪ್ರತ್ಯೇಕ ಮಾತುಕತೆ ನಡೆಸಿ ಅಭಿಪ್ರಾಯ ಪಡೆಯಲಾಗಿದೆ.
ಬಿಜೆಪಿಗೆ ಬಾಯ್ ಬಾಯ್ ..!ಕಾಂಗ್ರೆಸ್ ಹಾಯ್ ಹಾಯ್..!:
ಮಂಗಳೂರಿನಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ದ..26 ರಂದು ಪಕ್ಷದ ಉಸ್ತುವಾರಿ ನಾಯಕರು ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಜತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ ವೇಳೆ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಹಾಜರಾಗಿ ಅಭಿಪ್ರಾಯ ತಿಳಿಸಿದ್ದಾರೆ.
ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರೂ, ಉದ್ಯಮಿಗಳೂ, ವಿವಿಧ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ರೂವಾರಿಗಳೂ ಆಗಿರುವ ದ.ಕ. ಜಿಲ್ಲಾ ಬಿಜೆಪಿಯ ಕಾರ್ಯಕಾರಿಣಿ ಸದಸ್ಯರಾಗಿದ್ದ ಅಶೋಕ್ ಕುಮಾರ್ ರೈಯವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹಲವು ಸಮಯಗಳಿಂದ ಸುದ್ದಿಯಾಗಿತ್ತು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಆಕಾಂಕ್ಷೆ ಹೊಂದಿದ್ದ ಅಶೋಕ್ ರೈಯವರಿಗೆ ಬಿಜೆಪಿಯಿಂದ ಈ ಬಾರಿಯೂ ಅವಕಾಶ ಸಿಗುವುದು ಬಹುತೇಕ ಕಡಿಮೆ ಎಂದು ಹೇಳಲಾಗುತ್ತಿದ್ದು ಅವರ ಅಭಿಮಾನಿಗಳು ಕೆಲ ದಿನಗಳ ಹಿಂದೆಯೇ ಕೆಪಿಸಿಸಿ ನಾಯಕರನ್ನು ಸಂಪರ್ಕಿಸಿದ್ದರು.
ಕೆಪಿಸಿಸಿ ನಾಯಕರೂ ಅಶೋಕ್ ರೈಯವರೊಂದಿಗೆ ಮಾತುಕತೆ ನಡೆಸಿದ್ದರು. ಆದರೂ ಅಶೋಕ್ ರೈ ಅಧಿಕೃತವಾಗಿ ಕಾಂಗ್ರೆಸ್ ಸೇರಿರಲಿಲ್ಲ. ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ 13 ಮಂದಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು ಅವರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಇದರ ಜತೆಗೆ ಅಶೋಕ್ ರೈಯವರೂ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಅಧಿಕೃತ ಮಾಹಿತಿ ಹೊರ ಬಿದ್ದಿರಲಿಲ್ಲ.
ಇದೀಗ ಅಶೋಕ್ ರೈಯವರ ಹೆಸರೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಇದೆ ಎಂಬ ಕಾರಣಕ್ಕಾಗಿ ಅವರನ್ನು ಪಕ್ಷದ ಪ್ರಮುಖರು ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಕರೆಸಿ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಛೇರಿಗೆ ಹಾಜರಾಗಿರುವ ಅಶೋಕ್ ರೈಯವರು ಪಕ್ಷ ನನಗೆ ಸ್ಪರ್ಧಿಸಲು ಅವಕಾಶ ನೀಡಿದರೆ ಖಂಡಿತವಾಗಿಯೂ ಗೆಲುವು ಖಚಿತ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.