ಪಾಕಿಸ್ತಾನದ ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮತ್ತು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಅಧಿಕಾರಿಗಳ ಪ್ರಕಾರ, ಆತ್ಮಹತ್ಯಾ ದಾಳಿಕೋರನು ಪ್ರಾರ್ಥನೆಯ ಸಮಯದಲ್ಲಿ ಮುಂದಿನ ಸಾಲಿನಲ್ಲಿದ್ದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮ ಜೊಹ್ರ್ ಪ್ರಾರ್ಥನೆ ಸಲ್ಲಿಸುತ್ತಿದ್ದ 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ.
ಸ್ಫೋಟದಲ್ಲಿ ಗಾಯಗೊಂಡಿರುವವರ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇವೆ. ಸದ್ಯ ಗಾಯಾಳುಗಳನ್ನು ಪೇಶಾವರ ಲೇಡಿ ರೀಡಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
“ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಾರ್ಥನೆಗಾಗಿ ಸೇರಿದ್ದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಕಟ್ಟಡದ ಒಂದು ಭಾಗವು ಕುಸಿದಿದೆ ಹಾಗೂ ಹಲವಾರು ಜನರು ಅದರ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ “ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ.
ಆತ್ಮಾಹುತಿ ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ಶಹಬಾಜ್ ಷರೀಫ್ ಅವರು, ಸಂತ್ರಸ್ತರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ ದಾಳಿಯ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದಾರೆ. ಇನ್ನು ದಾಳಿಯ ಕುರಿತು ಇದುವರೆಗೆ ಯಾವುದೇ ಉಗ್ರ ಸಂಘಟನೆಯು ಹೊಣೆ ಹೊತ್ತುಕೊಂಡಿಲ್ಲ.