ಬೆಂಗಳೂರು: ಮಂಗಳೂರಿನ ಕಂಕನಾಡಿಯ ಗರಡಿ ಬಳಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಹೆಚ್ಚಿನ ವಿಚಾರಣೆಗಾಗಿ ಈತನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಮಾರ್ಚ್ 15ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಸ್ಫೋಟದಲ್ಲಿ ತೀವ್ರ ಗಾಯಗೊಂಡಿದ್ದ ಶಾರಿಕ್‌ಗೆ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣಿಸದಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ 2022ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಮೂರೂವರೆ ತಿಂಗಳು ಚಿಕಿತ್ಸೆ ಪಡೆದಿದ್ದ ಶಾರಿಕ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಈತನನ್ನು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್‌ಐಎ: ಶಾರೀಕ್‌ನ ಚಿಕಿತ್ಸೆ ಸಮಯದಲ್ಲಿ ಎನ್‌ಐಎ ಅಧಿಕಾರಿಗಳು ಕಾವಲಿಗಿದ್ದರು. ಶಾರಿಕ್ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ವಶಕ್ಕೆ ಪಡೆದ ಅಧಿಕಾರಿಗಳು, ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ‘ಸ್ಫೋಟದಿಂದ ಗಾಯಗೊಂಡಿದ್ದ ಶಾರಿಕ್‌ನನ್ನು ಇದುವರೆಗೂ ವಿಚಾರಣೆ ಮಾಡಿಲ್ಲ. ಈತ, ಭಯೋತ್ಪಾದನಾ ಸಂಘಟನೆ ಜೊತೆ ಗುರುತಿಸಿಕೊಂಡಿರುವ ಮಾಹಿತಿ ಇದೆ. ವಿಚಾರಣೆಗಾಗಿ ಈತನನ್ನು ಕಸ್ಟಡಿಗೆ ನೀಡಬೇಕು’ ಎಂದು ಎನ್‌ಐಎ ಅಧಿಕಾರಿಗಳು ಕೋರಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಶಾರಿಕ್‌ನನ್ನು ಕಸ್ಟಡಿಗೆ ವಹಿಸಿತು.