ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ರಾಜ್ಯದ1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಸುಮಾರು 7ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿ ಸ್ನೇಹಿಯಾಗಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.