ಮಡಿಕೇರಿ: ಕಾರು ಮತ್ತು ಕರ್ನಾಟಕ ರಾಜ್ಯ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನಡೆದಿದೆ.
ಮಳವಳ್ಳಿ ತಾಲೂಕಿನ ಕುಮಾರ (35), ಪ್ರಿಯಾಂಕ (42), ಶೀಲಾ (29), ಯಶಸ್ ಗೌಡ (12), ಮಕ್ಕಳಾದ ಮನಸ್ವಿ (8), ಮಿಷಿಕಾ (ಒಂದೂವರೆ ವರ್ಷ) ಮೃತರು.
ಮೃತರು ಮೂಲತಃ ಮಂಡ್ಯ ಜಿಲ್ಲೆಯವರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇಬ್ಬರು ಮಹಿಳೆಯರು, ಮಕ್ಕಳ ಮೃತದೇಹಗಳನ್ನು ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಿದ್ದು, ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬ ಪುರುಷ ಮತ್ತು ಮಗುವಿನ ಮೃತದೇಹ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳ ಮತ್ತು ಸುಳ್ಯ ಆಸ್ಪತ್ರೆಗೆ ಕೊಡಗು ಎಸ್ಪಿ ರಾಮರಾಜನ್, ಹೆಚ್ಚುವರಿ ಎಸ್ಪಿ ಸುಂದರರಾಜನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.