Odisha Train Accident ; ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ – 233 ಮಂದಿ ಬಲಿ, 900 ಮಂದಿಗೆ ಗಾಯ – ಕಹಳೆ ನ್ಯೂಸ್
ಭುವನೇಶ್ವರ: ಒಡಿಶಾದಲ್ಲಿ (Odisha Train Tragedy) ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ದುರಂತಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 233 ಕ್ಕೆ ಏರಿದೆ. ಅಲ್ಲದೇ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಚೆನ್ನೈ-ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ಯಶವಂತಪುರ ಪ್ಯಾಸೆಂಜರ್ ರೈಲು ಹಾಗೂ ಸರಕು ಸಾಗಾಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂ. ಪರಿಹಾರವನ್ನು ರೈಲ್ವೇ ಇಲಾಖೆ ಘೋಷಿಸಿದೆ.
ಅಪಘಾತದ ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. 3 ಎನ್‌ಡಿಆರ್‌ಎಫ್, 4 ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ 50 ಅಂಬುಲೆನ್ಸ್‌ಗಳು ನಿರಂತರ ಓಡಾಟ ಮಾಡುತ್ತಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸ್ಥಳೀಯ ಜನ ಕೂಡ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಒಡಿಶಾ ರೈಲು ಅಪಘಾತ ಸಹಾಯವಾಣಿ ಆರಂಭಿಸಲಾಗಿದೆ. ಗಾಯಾಳುಗಳು, ಮೃತಪಟ್ಟವರ ಮಾಹಿತಿ ಪಡೆಯಲು ಸಹಾಯವಾಣಿ ಸ್ಥಾಪನೆ ಮಾಡಲಾಗಿದೆ.