ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ; ಸಿಎಂಗೆ ತನ್ವೀರ್ ಸೇಠ್ ಪತ್ರ – ಕಹಳೆ ನ್ಯೂಸ್
ಮೈಸೂರು: ವಿದ್ಯುತ್ ದರ ಏರಿಕೆ (Electricity Price Hike) ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ (Tanveer sait) ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ.
ಎರಡು ಪುಟಗಳ ಪತ್ರ ಬರೆದು ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಸಾಧಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಅದರಲ್ಲಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ (200 Unit Free Electricity) ನೀಡುವುದು ಪ್ರಮುಖವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಸೌಲಭ್ಯ ಕೊಟ್ಟು ಕಿತ್ತುಕೊಂಡಂತಾಗಿದೆ:
ಮುಂದುವರಿದು… ಉಚಿತ ವಿದ್ಯುತ್ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ನಿಗಮಗಳಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯ ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ದರ ಏರಿಕೆ ಆದೇಶವನ್ನ ಮರುಪರಿಶೀಲಿಸಿ, ಜನಸಾಮಾನ್ಯರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದ ಕೋರಿದ್ದಾರೆ.